ಯೇಸು ಮೋಶೆಗಿಂತ ಶ್ರೇಷ್ಠನು
3
1 ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.
2 ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು.
3 ಒಬ್ಬ ಮನುಷ್ಯನು ಮನೆಯನ್ನು ಕಟ್ಟಿದಾಗ, ಜನರು ಮನೆಗಿಂತಲೂ ಅವನಿಗೇ ಹೆಚ್ಚು ಮಾನ್ಯತೆಯನ್ನು ಕೊಡುವಂತೆಯೇ ಯೇಸು ಮೋಶೆಗಿಂತ ಹೆಚ್ಚು ಮಾನ್ಯತೆಯನ್ನು ಹೊಂದಿದ್ದಾನೆ.
4 ಪ್ರತಿಯೊಂದು ಮನೆಯು ಯಾರಾದರೊಬ್ಬರಿಂದ ಕಟ್ಟಲ್ಪಟ್ಟಿರಬೇಕು. ಆದರೆ ದೇವರು ಎಲ್ಲವನ್ನು ನಿರ್ಮಿಸಿದನು.
5 ದೇವರ ಮನೆಯಲ್ಲೆಲ್ಲಾ ಮೋಶೆಯು ಸೇವಕನಂತೆ ನಂಬಿಗಸ್ತನಾಗಿದ್ದನು. ಮುಂದೆ ಪ್ರಕಟವಾಗಲಿದ್ದ ಸಂಗತಿಗಳಿಗೆ ಅವನು ಸಾಕ್ಷಿಯಾಗಿದ್ದನು.
6 ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.
ನಾವು ದೇವರನ್ನು ಅನುಸರಿಸಲೇಬೇಕು
7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ,
“ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
8 ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.
ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು.
9 ನಾನು ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಮಾಡಿದ್ದನ್ನು ನಿಮ್ಮ ಪೂರ್ವಿಕರು ನೋಡಿದರೂ
ನನ್ನನ್ನೂ ನನ್ನ ತಾಳ್ಮೆಯನ್ನೂ ಪರೀಕ್ಷಿಸಿದರು.
10 ಆದ್ದರಿಂದ ಅವರ ಮೇಲೆ ನಾನು ಕೋಪಗೊಂಡಿದ್ದೆನು.
‘ಅವರ ಆಲೋಚನೆಗಳು ಯಾವಾಗಲೂ ತಪ್ಪಾಗಿವೆ.
ನನ್ನ ಮಾರ್ಗವನ್ನು ಅವರು ಅರ್ಥಮಾಡಿಕೊಳ್ಳಲೇ ಇಲ್ಲ’ ಎಂದು ನಾನು ಹೇಳಿದೆನು.
11 ‘ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ’
ಎಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಕೀರ್ತನೆ 95:7-11
12 ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.
13 ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.
14 ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.
15 ಪವಿತ್ರ ಗ್ರಂಥವು ಹೇಳುವುದೇನೆಂದರೆ:
“ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” ಕೀರ್ತನೆ 95:7-8
16 ದೇವರ ಸ್ವರವನ್ನು ಕೇಳಿಯೂ ಆತನಿಗೆ ವಿರುದ್ಧರಾದವರು ಯಾರು? ಮೋಶೆಯ ಮೂಲಕ ಈಜಿಪ್ಟಿನಿಂದ ಬಿಡುಗಡೆ ಹೊಂದಿದವರಲ್ಲವೇ?
17 ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.
18 ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ?
19 ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.