24
ನೆಲಸಮವಾಗಲಿರುವ ಮಹಾದೇವಾಲಯ
(ಮಾರ್ಕ 13:1-31; ಲೂಕ 21:5-33)
ಯೇಸು ದೇವಾಲಯದಿಂದ ಹೋಗುತ್ತಿದ್ದಾಗ ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸಲು ಆತನ ಬಳಿಗೆ ಬಂದರು. ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.
ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.
ಯೇಸು ಅವರಿಗೆ ಕೊಟ್ಟ ಉತ್ತರವಿದು: “ಎಚ್ಚರವಾಗಿರಿ! ನಿಮ್ಮನ್ನು ಮೋಸಗೊಳಿಸಲು ಯಾರಿಗೂ ಅವಕಾಶ ಕೊಡಬೇಡಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು. ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು. ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ. ಇವೆಲ್ಲಾ ಪ್ರಸವವೇದನೆಯ ಆರಂಭವಷ್ಟೇ.
“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು. 10 ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು. 11 ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು. 12 ಲೋಕದಲ್ಲಿ ದುಷ್ಟತನವು ಹೆಚ್ಚಾಗಿ ಬಹುಜನ ವಿಶ್ವಾಸಿಗಳ ಪ್ರೀತಿಯು ಅಡಗಿಹೋಗುವುದು. 13 ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ. 14 ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.
15 “ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು* ಭಯಂಕರವಾದ … ವಸ್ತುವೊಂದನ್ನು ನೋಡಿರಿ: ದಾನಿಯೇಲ 9:27; 12:11. ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.) 16 ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. 17 ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ. 18 ಹೊಲದಲ್ಲಿರುವವನು ತನ್ನ ಮೇಲಂಗಿಯನ್ನು ತೆಗೆದುಕೊಳ್ಳುವುದಕ್ಕಾಗಿ ಮನೆಗೆ ಹಿಂತಿರುಗದಿರಲಿ.
19 “ಆ ಸಮಯದಲ್ಲಿ ಗರ್ಭಿಣಿಯರಿಗೂ ಮೊಲೆಕೂಸುಗಳಿರುವ ಸ್ತ್ರೀಯರಿಗೂ ಎಂಥಾ ಗೋಳಾಟ! 20 ನೀವು ಓಡಿಹೋಗಬೇಕಾದ ಈ ಸಮಯವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಾಗಲಿ ಬರದಂತೆ ಪ್ರಾರ್ಥಿಸಿರಿ. 21 ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.
22 “ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.
23 “ಆ ಸಮಯದಲ್ಲಿ ಕೆಲವರು ನಿಮಗೆ, ‘ನೋಡಿ, ಕ್ರಿಸ್ತನು ಅಲ್ಲಿದ್ದಾನೆ!’ ಎಂದು ಹೇಳಬಹುದು. ಇಲ್ಲವೆ ಬೇರೊಬ್ಬನು, ‘ಆತನು ಇಲ್ಲಿದ್ದಾನೆ!’ ಎಂದು ಹೇಳಬಹುದು. ಆದರೆ ಅವರನ್ನು ನಂಬಬೇಡಿ. 24 ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು. 25 ಅದು ಸಂಭವಿಸುವುದಕ್ಕೆ ಮುಂಚೆಯೇ ನಾನು ಅದರ ವಿಷಯವಾಗಿ ನಿಮಗೆ ಎಚ್ಚರಿಕೆ ಕೊಟ್ಟಿದ್ದೇನೆ.
26 “ ‘ಕ್ರಿಸ್ತನು ಅಡವಿಯಲ್ಲಿದ್ದಾನೆ!’ ಎಂದು ಕೆಲವರು ಹೇಳಿದರೆ ಅಡವಿಗೆ ಹೋಗಬೇಡಿ. ‘ಕ್ರಿಸ್ತನು ಆ ಕೋಣೆ ಒಳಗೆ ಇದ್ದಾನೆ!’ ಎಂದು ಹೇಳಿದರೆ ಅದನ್ನು ನಂಬಬೇಡಿ. 27 ಮನುಷ್ಯಕುಮಾರನು ಜನರಿಗೆಲ್ಲ ಕಾಣಿಸುವಂತೆ ಬರುತ್ತಾನೆ. ಮನುಷ್ಯಕುಮಾರನ ಪ್ರತ್ಯಕ್ಷತೆಯು ಆಕಾಶದಲ್ಲಿ ಮಿಂಚು ಹೊಳೆಯುವಂತೆ ಪ್ರಕಾಶಿಸುತ್ತಾ ಲೋಕದ ಎಲ್ಲಾ ಕಡೆಗಳಲ್ಲೂ ಕಾಣಿಸುವುದು. 28 ಹದ್ದುಗಳು ಎಲ್ಲಿ ಕೂಡಿಬರುತ್ತವೆಯೋ ಅಲ್ಲಿ ಹೆಣವಿರುತ್ತದೆ ಎಂಬುದು ನಿಮಗೆ ಗೊತ್ತೇ ಇದೆ. ಅದೇ ರೀತಿ ನನ್ನ ಬರುವಿಕೆಯೂ ಸ್ಪಷ್ಟವಾಗಿರುವುದು.
29 “ಆ ದಿನಗಳ ಸಂಕಟವು ತೀರಿದ ಕೂಡಲೇ,
 
‘ಸೂರ್ಯನು ಕತ್ತಲಾಗುವನು.
ಚಂದ್ರನು ಕಾಂತಿಹೀನನಾಗುವನು.
ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು.
ಆಕಾಶಮಂಡಲವು ಕಂಪಿಸುವುದು.’ ಯೆಶಾಯ 13:10; 34:45
 
30 “ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು. 31 ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.
32 “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ. 33 ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. 34 ಇಂದಿನ ಜನರು ಇನ್ನೂ ಜೀವಿಸಿರುವಾಗಲೇ ಈ ಎಲ್ಲಾ ಸಂಗತಿಗಳು ಸಂಭವಿಸುತ್ತವೆ! 35 ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!
ಆ ಸಮಯ ದೇವರೊಬ್ಬನಿಗೆ ಗೊತ್ತಿದೆ
(ಮಾರ್ಕ 13:32-37; ಲೂಕ 17:26-30; 34-36)
36 “ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.
37 “ನೋಹನ ಕಾಲದಲ್ಲಿ ಸಂಭವಿಸಿದಂತೆಯೇ ಮನುಷ್ಯಕುಮಾರನು ಬರುವಾಗಲೂ ಸಂಭವಿಸುತ್ತದೆ. 38 ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು. 39 ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು.
“ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು. 40 ಹೊಲದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದರೆ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. 41 ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಧಾನ್ಯ ಬೀಸುತ್ತಿದ್ದರೆ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬಳನ್ನು ಬಿಡಲಾಗುವುದು.
42 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು. 43 ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ. 44 ಆದ್ದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಸಮಯದಲ್ಲಿ ಮನುಷ್ಯಕುಮಾರನು ಬರುತ್ತಾನೆ.
ಒಳ್ಳೆಯ ಸೇವಕ ಮತ್ತು ದುಷ್ಟ ಸೇವಕ
(ಲೂಕ 12:41-48; 34-36)
45 “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ. 46 ತನಗೆ ಕೊಟ್ಟ ಕೆಲಸವನ್ನು ಮಾಡುತ್ತಿರುವಾಗ ಯಜಮಾನನು ಬಂದರೆ ಆ ಸೇವಕನಿಗೆ ಬಹಳ ಸಂತೋಷವಾಗುತ್ತದೆ. 47 ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಆ ಯಜಮಾನನು ತನ್ನ ಆಸ್ತಿಗೆಲ್ಲಾ ಆ ಸೇವಕನನ್ನು ಮೇಲ್ವಿಚಾರಕನನ್ನಾಗಿ ನೇಮಿಸುವನು.
48 “ಆದರೆ ಸೇವಕನು ದುಷ್ಟನಾಗಿದ್ದರೆ ಮತ್ತು ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದು ನೆನಸಿಕೊಂಡಿದ್ದರೆ ಅವನಿಗೆ ಏನು ಸಂಭವಿಸುತ್ತದೆ? 49 ಆ ಸೇವಕನು ಇತರ ಸೇವಕರನ್ನು ಹೊಡೆಯುತ್ತಾ ತನ್ನಂಥ ಜನರೊಂದಿಗೆ ಸೇರಿಕೊಂಡು ತಿನ್ನುತ್ತಾ ಕುಡಿಯುತ್ತಾ ಇರುವನು. 50 ಹೀಗೆ ಅವನಿನ್ನೂ ಸಿದ್ಧನಾಗಿಲ್ಲದಿರುವಾಗ ಯಜಮಾನನು ಅನಿರೀಕ್ಷಿತವಾಗಿ ಬಂದು 51 ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.

*24:15: ಭಯಂಕರವಾದ … ವಸ್ತುವೊಂದನ್ನು ನೋಡಿರಿ: ದಾನಿಯೇಲ 9:27; 12:11.